ಲಾರ್ಡ್ಸ್ ಟೆಸ್ಟ್‌ನಲ್ಲಿ ಗಾಯಗೊಂಡ ಶೋಯೆಬ್ ಬಷೀರ್ ಬದಲಿಗೆ ಹ್ಯಾಂಪ್‌ಷೈರ್‌ನ ಲಿಯಾಮ್ ಡಾಸೆನ್ ಇಂಗ್ಲೆಂಡ್ ತಂಡಕ್ಕೆ ಸೇರ್ಪಡೆ. ಜುಲೈ 23ರಿಂದ ಓಲ್ಡ್ ಟ್ರಾಫೋರ್ಡ್‌ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್‌ಗೆ ಬಲಿಷ್ಠ ತಂಡವನ್ನು ಇಂಗ್ಲೆಂಡ್ ಪ್ರಕಟಿಸಿದೆ.
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಇದೀಗ ಬಲಿಷ್ಠ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟವಾಗಿದೆ. ಲಾರ್ಡ್ಸ್ ಟೆಸ್ಟ್ ಗೆಲುವಿನ ಬೆನ್ನಲ್ಲೇ ಇದೀಗ ಜುಲೈ 23ರಿಂದ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಇದೀಗ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟವಾಗಿದೆ.
ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಕೈಬೆರಳಿನ ಗಾಯಕ್ಕೆ ತುತ್ತಾಗಿರುವ ಶೋಯೆಬ್ ಬಷೀರ್, ಭಾರತ ಎದುರಿನ ಇನ್ನುಳಿದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಹೀಗಾಗಿ ಶೋಯೆಬ್ ಬಷೀರ್ ಬದಲಿಗೆ ಹ್ಯಾಂಪ್‌ಷೈರ್‌ನ ಎಡಗೈ ಸ್ಪಿನ್ನರ್ ಲಿಯಾಮ್ ಡಾಸೆನ್ ಅವರಿಗೆ ಇಂಗ್ಲೆಂಡ್ ತಂಡದಲ್ಲಿ ಮಣೆ ಹಾಕಲಾಗಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯದ ವೇಳೆ ಸೋಮರ್‌ಸೆಟ್‌ನ ಸ್ಪಿನ್ನರ್ ಶೋಯೆಬ್ ಬಷೀರ್ ಕೈಬೆರಳಿನ ಗಾಯ ಮಾಡಿಕೊಂಡಿದ್ದರು.
35 ವರ್ಷದ ಲಿಯಾಮ್ ಡಾಸೆನ್ 2017ರ ಜುಲೈನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ಟೆಸ್ಟ್ ತಂಡವನ್ನು ಪ್ರತಿನಿಧಿಸಿದ್ದರು. ಇದೀಗ ಡಾಸೆನ್ ಇಂಗ್ಲೆಂಡ್ ಪರ ಮೂರನೇ ಟೆಸ್ಟ್ ಪಂದ್ಯವನ್ನಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ಲಿಯಾಮ್ ಡಾಸೆನ್ ಕಳೆದ ಕೆಲ ವರ್ಷಗಳಿಂದ ಹ್ಯಾಂಪ್‌ಷೈರ್ ಕ್ಲಬ್ ಪರ ಅತ್ಯಂತ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು.
ಲಿಯಾಮ್ ಡಾಸೆನ್ ಅವರ ಆಯ್ಕೆಯನ್ನು ಇಂಗ್ಲೆಂಡ್ ಕ್ರಿಕೆಟ್ ಆಯ್ಕೆ ಸಮಿತಿ ಮುಖ್ಯಸ್ಥ ಲೂಕ್ ರೈಟ್ ಸಮರ್ಥಿಸಿಕೊಂಡಿದ್ದಾರೆ. 'ಲಿಯಾಮ್ ಡಾಸೆನ್ ಇಂಗ್ಲೆಂಡ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳಲು ಅರ್ಹರಾಗಿದ್ದಾರೆ. ಅವರು ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಂತ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ ಎಂದು ಹೇಳಿದ್ದಾರೆ.
ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ಕ್ರಿಕೆಟ್ ತಂಡ ಹೀಗಿದೆ:
ಬೆನ್ ಸ್ಟೋಕ್ಸ್(ನಾಯಕ), ಜೋಫ್ರಾ ಆರ್ಚರ್, ಗುಸ್ ಅಟ್ಕಿನ್‌ಸನ್, ಜೇಕೊಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸ್, ಜಾಕ್ ಕ್ರಾಲಿ, ಲಿಯಾಮ್ ಡಾಸೆನ್, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಜೇಮೀ ಸ್ಮಿತ್, ಜೋಶ್ ಟಂಗ್, ಕ್ರಿಸ್ ವೋಕ್ಸ್.
ಇನ್ನು ಭಾರತ ಹಾಗೂ ಇಂಗ್ಲೆಂಡ್ ನಡುವಿನ ಆಂಡರ್‌ಸನ್-ತೆಂಡುಲ್ಕರ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು 2-1 ಅಂತರದ ಮುನ್ನಡೆ ಸಾಧಿಸಿದೆ. ಲೀಡ್ಸ್‌ನ ಹೆಡಿಂಗ್ಲೆಯಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್ ತಂಡವು 5 ವಿಕೆಟ್ ಅಂತರದ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿತ್ತು. ಇನ್ನು ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ 336 ರನ್ ಅಂತರದ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 1-1ರ ಸಮಬಲ ಸಾಧಿಸಿತ್ತು. ಇದಾದ ಬಳಿಕ ಲಾರ್ಡ್ಸ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವು 22 ರನ್ ಅಂತರದ ಜಯ ಸಾಧಿಸುವ ಮೂಲಕ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.
ಭಾರತ ತಂಡವು 2007ರಲ್ಲಿ ಇಂಗ್ಲೆಂಡ್ ನೆಲದಲ್ಲಿ ಕೊನೆಯ ಬಾರಿಗೆ ಟೆಸ್ಟ್ ಸರಣಿ ಜಯಿಸುವಲ್ಲಿ ಯಶಸ್ವಿಯಾಗಿತ್ತು. ಇದಾದ ಬಳಿಕ ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿ ಗೆಲುವು ಗಗನ ಕುಸುಮವಾಗಿಯೇ ಉಳಿದಿದೆ. ಇದೀಗ ಈ ಸರಣಿಯಲ್ಲಿ ಇನ್ನೆರಡು ಟೆಸ್ಟ್ ಪಂದ್ಯಗಳು ಬಾಕಿ ಉಳಿದಿವೆ. ಇನ್ನುಳಿದ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವು ಗೆಲುವು ಸಾಧಿಸಿದರಷ್ಟೇ ಟೆಸ್ಟ್ ಸರಣಿಯನ್ನು 3-2 ಅಂತರದಲ್ಲಿ ಜಯಿಸಲು ಸಾಧ್ಯವಾಗಲಿದೆ. ಹೀಗಾಗಬೇಕಿದ್ದರೇ ಶುಭ್‌ಮನ್ ಗಿಲ್ ನೇತೃತ್ವದ ಭಾರತ ಕ್ರಿಕೆಟ್ ತಂಡವು ಸಂಘಟಿತ ಪ್ರದರ್ಶನ ತೋರಬೇಕಿದೆ.


