Mysuru pocso case: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಗ್ರಾಮಸ್ಥರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಮೈಸೂರು (ಡಿ.6): ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಗ್ರಾಮಸ್ಥರು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಲೋಕೇಶ್ (46) ಎಂದು ಗುರುತಿಸಲಾಗಿದೆ. ಆರೋಪಿ ಲೋಕೇಶ್ ಡಿ.3ರಂದು 9 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಬಿಳಿಕೆರೆ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲು:

ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ಬಿಳಿಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ವಿಷಯ ತಿಳಿದ ಆರೋಪಿ ಲೋಕೇಶ್ ಪೊಲೀಸರಿಗೆ ಶರಣಾಗಲು ನಿರ್ಧರಿಸಿ ಬಿಳಿಕೆರೆ ಪೊಲೀಸ್ ಠಾಣೆಯತ್ತ ಬರುತ್ತಿದ್ದನು. ಈ ವೇಳೆ ಆರೋಪಿಯನ್ನ ಅಡ್ಡಗಟ್ಟಿದ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಸದ್ಯ ಆರೋಪಿ ಲೋಕೇಶ್‌ನನ್ನು ಪೊಲೀಸರು ಬಂಧಿಸಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.