ರಸಗೊಬ್ಬರ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳ್ತಿದ್ದಾರೆ: ಪ್ರಲ್ಹಾದ್ ಜೋಶಿ ಕಿಡಿ
ಕರ್ನಾಟಕಕ್ಕೆ ರಸಗೊಬ್ಬರ ಪೂರೈಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಸುಳ್ಳು ಹೇಳುತ್ತ ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ.

ನವದೆಹಲಿ (ಜು.26): ಕರ್ನಾಟಕಕ್ಕೆ ರಸಗೊಬ್ಬರ ಪೂರೈಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಸುಳ್ಳು ಹೇಳುತ್ತ ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ರಾಜ್ಯದಲ್ಲಿ ಮುಂಗಾರು ಹಂಗಾಮಿಗಾಗಿ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆಯಿದೆ ಎಂದು ರಾಜ್ಯ ಸರ್ಕಾರ ಬೇಡಿಕೆ ಇಟ್ಟಿತ್ತು.
ಆದರೆ, ಕೇಂದ್ರ ರಸಗೊಬ್ಬರ ಇಲಾಖೆ ರಾಜ್ಯದ ರೈತರ ಹಿತದೃಷ್ಟಿಯಿಂದ ಸಕಾಲಿಕವಾಗಿ 8.73 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ ಮಾಡಿದೆ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ 7.08 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಮಾರಾಟ ದಾಖಲಾಗಿದೆ. ಕೇಂದ್ರ ಸರ್ಕಾರ ಸಕಾಲಕ್ಕೆ ಸಮರ್ಪಕವಾಗಿ ರಸಗೊಬ್ಬರ ಪೂರೈಸಿದ್ದರಿಂದಲೇ ಇಷ್ಟೊಂದು ಪ್ರಮಾಣದಲ್ಲಿ ರಸಗೊಬ್ಬರ ವಹಿವಾಟು ನಡೆದಿದೆ ಎಂದರು.
ವಾಸ್ತವ ಹೀಗಿರುವಾಗ ಸಿಎಂ ಸಿದ್ದರಾಮಯ್ಯ ಅವರು ವಿನಾಕಾರಣ ಕೇಂದ್ರದ ಮೇಲೆ ಆರೋಪ ಮಾಡುತ್ತಿರುವುದು ನಿಜಕ್ಕೂ ಶೋಚನೀಯ ಎಂದು ಟೀಕಿಸಿದರು. ರಾಜ್ಯದಲ್ಲಿ ಯೂರಿಯಾ ಅಭಾವವಿಲ್ಲ. ಹೆಚ್ಚಿನ ಸಂಗ್ರಹಣೆಯಿದೆ ಎಂದು ಖುದ್ದು ಕೃಷಿ ಸಚಿವ ಚಲುವರಾಯಸ್ವಾಮಿ ಅವರೇ ಸ್ಪಷ್ಟಪಡಿಸಿದ್ದಾರೆ.
ಆದರೆ, ಸಿಎಂ ಮಾತ್ರ ಅವಾಸ್ತವಿಕ ಹೇಳಿಕೆ ನೀಡುತ್ತಿದ್ದಾರೆ. ತಮ್ಮ ಕುರ್ಚಿ ಗಲಾಟೆ, ಹದಗೆಟ್ಟ ರಾಜ್ಯದ ಆರ್ಥಿಕ ಸ್ಥಿತಿ ಮತ್ತು ತಮ್ಮ ಸರ್ಕಾರದ ದುರಾಡಳಿತವನ್ನೆಲ್ಲ ಮರೆಮಾಚಲು ಹೀಗೆ ಕೇಂದ್ರ ಸರ್ಕಾರದ ವಿರುದ್ದ ಸುಳ್ಳು ಆರೋಪ ಮಾಡುತ್ತಿರುವುದು ಅಕ್ಷಮ್ಯ ಎಂದು ಸಚಿವರು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

