ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಹುಬ್ಬಳ್ಳಿ (ಆ.18): ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಂದು (ಆಗಸ್ಟ್ 18) ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಈ ಬಗ್ಗೆ ಆದೇಶ ಹೊರಡಿಸಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ಮಳೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ. ಭವಿಷ್ಯದಲ್ಲಿ ರಜೆ ನೀಡಿದ ದಿನವನ್ನು ಸರಿದೂಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಶೈಕ್ಷಣಿಕ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಮುಂಗಾರು ಮಳೆಯು ರಾಜ್ಯಾದ್ಯಂತ ಚುರುಕುಗೊಂಡಿದ್ದು, ನಾಳೆ (ಆ.19) ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ಉತ್ತರ ಒಳನಾಡಿಗೆ ರೆಡ್ ಅಲರ್ಟ್: ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿ, ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಕೆಲವೆಡೆ ಕೂಡ ಭಾರೀ ಮಳೆಯ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಜಾರಿ ಮಾಡಲಾಗಿದೆ.
ಇತರೆ ಜಿಲ್ಲೆಗಳಲ್ಲಿ ಮಳೆ ಪ್ರಮಾಣ:
ಉತ್ತರ ಒಳನಾಡು: ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ಬೀದರ್, ಕಲಬುರ್ಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು: ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಭಾರಿಯಿಂದ ಅತಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ದಾವಣಗೆರೆಯಲ್ಲಿ ಕೂಡ ಹೆಚ್ಚು ಮಳೆಯಾಗಲಿದೆ.
ಇತರೆ ಜಿಲ್ಲೆಗಳು: ಉಳಿದಂತೆ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.


