ಬಿಜೆಪಿಗರು ಪದೇ ಪದೇ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದು, ಇದು ಅವರ ಹಾಗೂ ಆ ಪಕ್ಷದ ಮನಸ್ಥಿತಿಯನ್ನು ತೋರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ.
ಬೀದರ್ (ಜು.05): ಬಿಜೆಪಿಗರು ಪದೇ ಪದೇ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದು, ಇದು ಅವರ ಹಾಗೂ ಆ ಪಕ್ಷದ ಮನಸ್ಥಿತಿಯನ್ನು ತೋರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ. ಎಂಎಲ್‌ಸಿ ರವಿಕುಮಾರ್ ಹೇಳಿಕೆ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಹಿಳೆಯರನ್ನು ಅಪಮಾನ ಮಾಡುವುದು ಬಿಜೆಪಿಗರಿಗೆ ಚಾಳಿಯಾಗಿ ಬಿಟ್ಟಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೈತಿಕ ಸ್ಥೈರ್ಯ ಕುಗ್ಗಬೇಕು, ಮಹಿಳೆಯರು ಯಾರೂ ಮುಂದೆ ಬರಬಾರದು ಎಂಬುವದು ಬಿಜೆಪಿಗರ ಯೋಚನೆ ಎಂದು ಆರೋಪಿಸಿದರು. ಬಿಜೆಪಿಯವರು ತತ್ವ ಸಿದ್ಧಾಂತ ಅಂತ ಹೇಳುತ್ತಾರೆ. ಆದರೆ ಈ ರೀತಿ ಮನುಸ್ಮೃತಿಯನ್ನು ಎಲ್ಲಾ ಕಡೆ ಬಿತ್ತನೆ ಮಾಡಲು ಹೊರಟ್ಟಿದ್ದಾರೆ. ಹೆಣ್ಣು ಮಕ್ಕಳನ್ನು ಅವಮಾನ ಮಾಡಿದರೆ ಖಂಡಿಸುವುದು ನಮ್ಮ ಸಮಾಜದ ಧರ್ಮ ಎಂದರು.
ಅಂಗನವಾಡಿ ನೇಮಕಾತಿ ಸರಳ, ಪಾರದರ್ಶಕವಾಗಿರಲಿ: ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲಬುರಗಿ ವಿಭಾಗೀಯ ಮಟ್ಟದ ಮೊದಲ ದಿನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ಕಾರಣದಿಂದಲೂ ನೇಮಕಾತಿಗಳು ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದರು.
ನೇಮಕಾತಿ ವೇಳೆ ಸಮಸ್ಯೆಗಳು ಕಂಡು ಬಂದಲ್ಲಿ ತಕ್ಷಣವೇ ಪರಿಹರಿಸಬೇಕು, ನಮ್ಮ ಇಲಾಖೆಯು ಜನರಿಗೆ, ಜನರ ಬದುಕಿಗೆ ಹತ್ತಿರವಾದ ಇಲಾಖೆ, ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ಮಾಡದೆ, ಕಾಳಜಿಯಿಂದ ಕೆಲಸ ಮಾಡಬೇಕು ಎಂದು ಎಚ್ಚರಿಕೆ ನೀಡಿದರು. ಕೇಂದ್ರ ಹಾಗೂ ರಾಜ್ಯದಿಂದ ಕಾಲಕಾಲಕ್ಕೆ ನೀಡಲಾಗುವ ಗುರಿಯನ್ನು ತಲುಪಲೇಬೇಕು. ಅನೇಕ ಕಡೆ ಮಕ್ಕಳಿಗೆ ಸರಿಯಾಗಿ ಮೊಟ್ಟೆ ತಲುಪುತ್ತಿಲ್ಲ. ಹಾಲಿನ ಪೌಡರ್ ಮಾರಿಕೊಳ್ಳುತ್ತಾರೆ ಎನ್ನುವ ದೂರುಗಳು ಕೇಳಿ ಬರುತ್ತಿವೆ. ಅದು ನಿಜವಾಗಿದ್ದಲ್ಲಿ ಅಂಥವುಗಳನ್ನು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ತಪ್ಪಿತಸ್ಥ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪ್ರತಿ ಅಧಿಕಾರಿಗಳು, ಸ್ಥಳೀಯ ಸಚಿವರು ಹಾಗೂ ಶಾಸಕರಿಗೆ ಇಲಾಖೆ ಕಾರ್ಯಕ್ರಮ ಮತ್ತು ಪ್ರಗತಿಯ ವಿವರಗಳನ್ನು ಕಾಲಕಾಲಕ್ಕೆ ಕಡ್ಡಾಯವಾಗಿ ನೀಡಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸೂಚಿಸಿದರು. ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮಾತನಾಡಿ, ಲಕ್ಷ್ಮೀ ಹೆಬ್ಬಾಳಕರ್ ಅವರು ನಮ್ಮ ಸರ್ಕಾರದ ಬಹಳ ಕ್ರಿಯಾಶೀಲ ಸಚಿವರು, ಮಹಿಳೆಯರು, ಮಕ್ಕಳು, ವಿಕಲಚೇತರು ಹಾಗೂ ಹಿರಿಯ ನಾಗರಿಕರ ಬಗ್ಗೆ ವಿಶೇಷ ಕಾಳಜಿ ವಹಿಸಿ ಕೆಲಸ ಮಾಡುತ್ತಿದ್ದಾರೆ. ಸದಾ ಹೆಚ್ಚಿನ ಅನುದಾನಕ್ಕಾಗಿ ಪ್ರಯತ್ನಿಸುತ್ತಲೇ ಇರುತ್ತಾರೆ. ಜವಾಬ್ದಾರಿಯುತವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ ಎಂದು ಪ್ರಶಂಸಿಸಿದರು.


