ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ. ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಳಗಾವಿ (ಡಿ.13): ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ. ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಗುರುವಾರ ಶಾಸಕರ ಜತೆ ಔತಣಕೂಟದ ಬಗ್ಗೆ ಪ್ರತಿಕ್ರಿಯಿಸಿ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ದೊಡ್ಡಣ್ಣನವರ ಕಳೆದ 15 ವರ್ಷಗಳಿಂದ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಾವೆಲ್ಲ ಹೋಗಿದ್ದೆವು. ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತ ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ನಾಡಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಊಟಕ್ಕೆ ಕರೆದಿದ್ದಾರೆ ಎಂದರು.
ಅನುದಾನ ಬಿಡುಗಡೆ ಕೋರಿಸರ್ವ ಪಕ್ಷ ನಿಯೋಗದಿಂದ ಪ್ರಧಾನ ಮಂತ್ರಿ ಭೇಟಿ
ಪ್ರಸಕ್ತ ಸಂಸತ್ತಿನ ಅಧಿವೇಶನದ ಮುಗಿಯುವುದರ ಒಳಗಾಗಿ, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‍ನಲ್ಲಿ ಘೋಷಿಸಿರುವ 5,300 ಕೋಟಿ ರು. ಅನುದಾನ ಬಿಡುಗಡೆ ಮಾಡುವಂತೆ ಕೋರಿ ಸರ್ವಪಕ್ಷಗಳ ನಿಯೋಗದೊಂದಿಗೆ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರದ ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರು. ಬಿಡುಗಡೆ ಮಾಡುವುದಾಗಿ ಘೋಷಿಸಿದ್ದರು. ಇದಕ್ಕೆ ಸಂಸತ್ತಿನ ಅನುಮೋದನೆ ದೊರೆತಿದೆ.
ಇದನ್ನು ಆಧರಿಸಿ ರಾಜ್ಯ ಸರ್ಕಾರದ ಅಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯ ಬಜೆಟ್‍ನಲ್ಲಿ ಅನುದಾನವನ್ನು ಮೀಸಲಿರಿದ್ದರು. ಸರ್ಕಾರ ಬದಲಾವಣೆಯಾದ ನಂತರ ಕೇಂದ್ರ ಸರ್ಕಾರ ಅನುದಾನ ಬಿಡಗಡೆ ನಿಲ್ಲಿಸಿದೆ. ಆದರೂ ರಾಜ್ಯ ಸರ್ಕಾರ ವಿಸ್ತೃತ ಯೋಜನೆ ತಯಾರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿದೆ. ಅನುದಾನ ಕಡತ ಪ್ರಧಾನಮಂತ್ರಿ ಕಚೇರಿಯಲ್ಲಿದೆ ಎಂಬ ಉತ್ತರಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ವೈಯಕ್ತಿಯವಾಗಿ ಪ್ರಧಾನಮಂತ್ರಿಗಳನ್ನು ಭೇಟಿಯಾದಾಗಲೂ ಅನುದಾನ ಬಿಡುಗಡೆ ಮಾಡುವಂತೆ ಪ್ರಸ್ತಾಪಿಸಿದ್ದೇನೆ ಎಂದು ತಿಳಿಸಿದರು.
ಈ ಹಿಂದೆ ರಾಜ್ಯ ಸರ್ಕಾರ ನಿಯೋಗ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡುವ ವೇಳೆ, ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು, ಆಹಾರ ಸರಬರಾಜು ಹಾಗೂ ನವೀಕರಣ ಸಂಪನ್ಮೂಲ ಇಂಧನ ಸಚಿವ ಪ್ರಲ್ಹಾದ್ ಜೋಶಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಹ ನಿಯೋಗದಲ್ಲಿ ಪಾಲ್ಗೊಳ್ಳುವಂತೆ ಕೋರಿದ್ದೆ, ಆದರೆ ಉಭಯ ಸಚಿವರು ಸಮಯಾವಕಾಶ ಕೊರತೆ ಹಿನ್ನೆಲೆಯಲ್ಲಿ ನಿಯೋಗದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದರು. ಪ್ರಸ್ತುತ ಸಂಸತ್ತಿನ ಅಧಿವೇಶನದ ಸಮಯದಲ್ಲಿಯೇ ಮೊತ್ತೊಮ್ಮೆ ಸರ್ವಪಕ್ಷಗಳ ನಿಯೋಗದೊಂದಿಗೆ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಆರಂಭದಲ್ಲಿ 2,800 ಕೋಟಿ ರು. ಇದ್ದ ಭದ್ರಾ ಮೇಲ್ದಂಡೆ ಯೋಜನೆಯ ವೆಚ್ಚ ಇಂದು 28,000 ಕೋಟಿ ರು.ಗೆ ಏರಿಕೆಯಾಗಿದೆ. ರಾಜ್ಯ ಸರ್ಕಾರ 22,000 ಕೋಟಿ ರು. ಬಂಡವಾಳವನ್ನು ನೀರಾವರಿ ಯೋಜನೆಗಳಿಗೆ ಮೀಸಲಿರಿಸಿದೆ. ಆದರೆ ರಾಜ್ಯದಲ್ಲಿ 1.25 ಲಕ್ಷ ಕೋಟಿ ರು. ಮೊತ್ತದ ನೀರಾವರಿ ಕಾಮಗಾರಿಗಳು ಚಾಲ್ತಿಯಲ್ಲಿವೆ. ಯೋಜನೆಗಳಿಂದಾಗಿ ಸರ್ಕಾರದ ಮೇಲೆ ಹೊರೆ ಹೆಚ್ಚಾಗಿದೆ. ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಶೇ.10 ರಷ್ಟು ಬಿಲ್ ಪಾವತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ ಹಂತ ಹಂತವಾಗಿ ತನ್ನ ಆಯವ್ಯಯದಲ್ಲಿ ನೀರಾವರಿ ಯೋಜನೆಗಳಿಗೆ ಅನುದಾನ ಮೀಸಲು ಇರಿಸಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.


