ಹಿರಿಯ ಐಎಎಸ್ ಅಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು (ಜೂ.18): ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಸುಮಾರು 14 ಎಕರೆ ಸರ್ಕಾರಿ ಭೂಮಿಯ ಅನಧಿಕೃತ ಒತ್ತುವರಿ ತೆರವುಗೊಳಿಸುವ ಸಂಬಂಧ ಹಿರಿಯ ಐಎಎಸ್ ಅಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ತಕರಾರು ಅರ್ಜಿ ಸಲ್ಲಿಸಿರುವ ಕುಮಾರಸ್ವಾಮಿ ಅವರು, ರಾಜ್ಯ ಕಂದಾಯ ಇಲಾಖೆ ಮತ್ತು ರಾಮನಗರ ತಹಶೀಲ್ದಾರ್ ಅವರನ್ನು ಪ್ರತಿವಾದಿ ಮಾಡಿದ್ದಾರೆ.
ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ಸರ್ವೇ ನಂಬರ್ 8, 9, 10, 16, 17 ಮತ್ತು 79ರಲ್ಲಿನ ಸುಮಾರು 14 ಎಕರೆ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಒತ್ತುವರಿ ತೆರವುಗೊಳಿಸುವ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಸೂಚಿಸಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚನೆ ಮಾಡಿ ಜ.28ರಂದು ಸರ್ಕಾರ ಆದೇಶಿಸಿದೆ.
ಸಮಿತಿ ರಚಿಸಿರುವುದನ್ನು ಪ್ರಶ್ನಿಸಿರುವ ಕುಮಾರಸ್ವಾಮಿ ಅವರು, ಸರ್ಕಾರ ಎಸ್‌ಐಟಿ ರಚಿಸಿ ಆದೇಶಿಸಿದ ಬಳಿಕ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ, ಎಸ್‌ಐಟಿ ರಚಿಸಿರುವ ಸರ್ಕಾರದ ಆದೇಶದ ನಂತರ ಕಂದಾಯ ಇಲಾಖೆಯ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳನ್ನು ಅಕ್ರಮ ಎಂದು ಘೋಷಿಸಬೇಕು. ಈ ಸಂಬಂಧ ಮೇ 29ರಂದು ನೀಡಿರುವ ಸಮನ್ಸ್ ರದ್ದುಪಡಿಸಬೇಕು ಎಂದು ಕೋರಿದ್ದಾರೆ.
ಪ್ರಕರಣದ ಹಿನ್ನೆಲೆ: ರಾಮನಗರ ಜಿಲ್ಲೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಸಂಬಂಧಿಗಳು ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಅರ್ಜಿಯ ಸಂಬಂಧ ಕರ್ನಾಟಕ ಲೋಕಾಯುಕ್ತ ವರದಿಯ ಅನುಸಾರ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ 2020ರಲ್ಲಿ ಆದೇಶಿಸಿತ್ತು. ಇದನ್ನು ಜಾರಿಗೊಳಿಸಿಲ್ಲ ಎಂದು ಸಮಾಜ ಪರಿವರ್ತನಾ ಸಮುದಾಯ, ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಪತ್ತೆ ಮಾಡಲು ರಾಜ್ಯ ಸರ್ಕಾರವು ಎಸ್‌ಐಟಿ ರಚಿಸಿದೆ. ಇದು ಕಾನೂನಿಗೆ ಅನುಗುಣವಾಗಿಲ್ಲ. ಆದ್ದರಿಂದ ಅದನ್ನು ಬದಿಗೆ ಸರಿಸಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಕೋರಿದ್ದಾರೆ.


