ಡಿ.ಕೆ.ಶಿವಕುಮಾರ ಅವರು ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾಗಿ ಹಾಗೂ ಡಿಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ನಾವ್ಯಾರು ಕೂಡ ಅದರ ಬಗ್ಗೆ ಪ್ರಸ್ತಾವ ಮಾಡಲ್ಲ ಎಂದ ಸಚಿವ ಕೆ.ಎಚ್. ಮುನಿಯಪ್ಪ
ಬೆಳಗಾವಿ(ಫೆ.06): ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರ ಬಂದಾಗ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಆದರೆ, ಅಂತಹ ಯಾವುದೇ ಪರಿಸ್ಥಿತಿ ಇಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದು, ಅವರೇ ಆ ಸ್ಥಾನದಲ್ಲಿ ಮುಂದುವರಿಯುತ್ತಾರೆ. ಸಿಎಂ ಬದಲಾವಣೆಯಾಗುತ್ತಾರೆ ಎಂದು ಮಾಧ್ಯಮದವರೇ ಜಾಸ್ತಿ ತೋರಿಸುತ್ತಿದ್ದೀರಿ. ಮುಖ್ಯಮಂತ್ರಿ ಬದಲಾಯಿಸುವಂತೆ ಒತ್ತಾಯಿಸಲು ಕೆಲ ಸಚಿವರು, ಶಾಸಕರು ದೆಹಲಿಗೆ ಹೋಗುತ್ತಿರುವ ವಿಷಯ ನನ್ನ ಗನಮಕ್ಕೆ ಬಂದಿಲ್ಲ. ಯಾರೂ ಕೂಡ ನನ್ನೊಂದಿಗೆ ಚರ್ಚೆ ಮಾಡಿಲ್ಲ ಎಂದರು.ಸಿದ್ದರಾಮಯ್ಯ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಸರ್ಕಾರದಿದ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಉತ್ತಮ ಬಜೆಟ್ ಕೂಡ ನೀಡಲಿದ್ದಾರೆ ಎಂದು ತಿಳಿಸಿದರು.
ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎನ್ನುವುದರಲ್ಲಿ ತಪ್ಪಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಡಿಸಿಎಂ ಡಿ.ಕೆ.ಶಿವಕುಮಾರ ಮುಂದಿನ ಸಿಎಂ ಎಂದು ಶಾಸಕರು, ಕಾರ್ಯಕರ್ತರು ಘೋಷಣೆ ಕೂಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಡಿ.ಕೆ.ಶಿವಕುಮಾರ ಅವರು ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾಗಿ ಹಾಗೂ ಡಿಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ನಾವ್ಯಾರು ಕೂಡ ಅದರ ಬಗ್ಗೆ ಪ್ರಸ್ತಾವ ಮಾಡಲ್ಲ ಎಂದ ಅವರು, ಸಿಎಂ ಬದಲಾವಣೆ ಆಗುತ್ತಾರೆಂಬ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿಕೆ ಕುರಿತು, ನೀವು ಅವರನ್ನೇ ಕೇಳಿ. ಅದರ ಬಗ್ಗೆ ಏನು ಗೊತ್ತಿಲ್ಲ ಎಂದರು.
ತೂಕದಲ್ಲಿ ರೈತರಿಗೆ ಆಗುತ್ತಿರುವ ವಂಚನೆ ತಡೆಯಲು ರಾಜ್ಯದ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ ಎಪಿಎಂಸಿ ಮೂಲಕ ಪ್ರತ್ಯೇಕ ತೂಕದ ಯಂತ್ರಗಳನ್ನು ಅಳವಡಿಸಲಾಗುವುದು. ಮುಖ್ಯಮಂತ್ರಿ ಇದಕ್ಕಾಗಿ ಹಣ ಬಿಡುಗಡೆ ಮಾಡಿದ್ದಾರೆ. ಶೀಘ್ರವೇ ಕಾಮಗಾರಿ ಆರಂಭವಾಗಲಿದೆ. ತೂಕದಲ್ಲಿ ಮೋಸ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
