ಬೆಂಗಳೂರಿನ ಖಾಸಗಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಲು ಸೂಚಿಸಿದ ಘಟನೆ ನಡೆದಿದೆ. ಈ ಸಂಬಂಧ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದ್ದು, ಎಫ್‌ಐಆರ್ ದಾಖಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ.
ಬೆಂಗಳೂರು (ಏ.25): ಬೆಂಗಳೂರಿನ ಖಾಸಗಿ ಕಾಲೇಜೊಂದರ ಸಿಇಟಿ ಪರೀಕ್ಷಾ ಕೇಂದ್ರದ ಸಿಬ್ಬಂದಿ ಗುರುವಾರ ಪರೀಕ್ಷೆಗೆ ಹಾಜರಾದ ಕೆಲ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಲು ಸೂಚಿಸಿದ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನಿಖೆಗೆ ಆದೇಶಿಸಿದೆ.
ಇದರ ಬೆನ್ನಲ್ಲೇ, ಕಾಲೇಜು ಕೇಂದ್ರಕ್ಕೆ ನಿಯೋಜನೆಗೊಂಡಿದ್ದ ಮೂವರು ಸಿಬ್ಬಂದಿಯನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿ, ಆಂತರಿಕ ವಿಚಾರಣೆ ಕೈಗೊಂಡಿರುವುದಾಗಿ ತಿಳಿಸಿದೆ.
ಏತನ್ಮಧ್ಯೆ ಜನಿವಾರ ತೆಗೆಸಿ ಧಾರ್ಮಿಕ ಭಾವನೆ ಧಕ್ಕೆ ತಂದಿರುವ ಆರೋಪದ ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಅದರ ಬೆನ್ನಲ್ಲೇ ಕಾಲೇಜಿನ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿದ್ಯಾರ್ಥಿ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಅಲ್ಲದೆ ವಿಚಾರಣೆಗೆ ಹಾಜರಾಗುವಂತೆ ಆರೋಪಿತರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ನಡುವೆ, ಬೆಂಗಳೂರು ನಗರ ಜಿಲ್ಲಾಧಿಕಾರಿ ಅವರು ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದ್ದು, 2 ದಿನದೊಳಗೆ ವರದಿ ನೀಡಲು ಸೂಚಿಸಿದ್ದಾರೆ.
ಗುರುವಾರ ರಾಜ್ಯದ 745 ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಸಿಇಟಿ ಪರೀಕ್ಷೆ ನಡೆದಿತ್ತು. ಈ ವೇಳೆ ನಗರದ ಪ್ರೀ ಯೂನಿವರ್ಸಿಟಿ ಕಾಲೇಜಿನ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬಂದ ಕೆಲ ವಿದ್ಯಾರ್ಥಿಗಳಿಗೆ ಕೇಂದ್ರದ ಸಿಬ್ಬಂದಿ ಜನಿವಾರ ತೆಗೆದು ಒಳ ಹೋಗುವಂತೆ ಸೂಚಿಸಿದ್ದರು. ಈ ಮಾಹಿತಿ ಲಭ್ಯವಾದ ಕೂಡಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಪ್ರಾಥಮಿಕ ಮಾಹಿತಿಯಲ್ಲಿ ಜನಿವಾರ ತೆಗೆಯುವಂತೆ ಸಿಬ್ಬಂದಿ ಸೂಚಿಸಿದ್ದು ನಿಜ. ಆದರೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ಒಳಬಿಡಲಾಯಿತು ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದಿದ್ದಾರೆ.
ಮೂವರು ಸಿಬ್ಬಂದಿ ಅಮಾನತು:
ಘಟನೆ ಬೆನ್ನಲ್ಲೇ ಕಾಲೇಜಿನ ಕೇಂದ್ರದಲ್ಲಿ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಸುಧಾಕರ್ ಡಿ., ಸರಿತಾ ಆರ್. ಮತ್ತು ಗಿರಿಜಮ್ಮ ಎಂಬ ಮೂವರು ಸಿಬ್ಬಂದಿಯನ್ನು ಕಾಲೇಜಿನ ಪ್ರಾಂಶುಪಾಲರು ಅಮಾನತು ಮಾಡಿದ್ದಾರೆ. ಪ್ರಕರಣವನ್ನು ತನಿಖೆಗೆ ಬಾಕಿ ಇಟ್ಟು ಈ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಕಾಲೇಜು ಆಡಳಿತ ಮಂಡಳಿ ಕರೆದಾಗ ಮೂವರು ಸಿಬ್ಬಂದಿ ವಿಚಾರಣೆಗೆ ಹಾಜರಾಗಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಕರ್ತವ್ಯಕ್ಕೆ ಹಾಜರಾಗುವಂತಿಲ್ಲ ಎಂದು ಹೇಳಿದ್ದಾರೆ.
ಕಳೆದ ವರ್ಷ ಬೀದರ್, ಶಿವಮೊಗ್ಗದಲ್ಲಿ ಗದ್ದಲ:
ಕಳೆದ ವರ್ಷವೂ ಸಿಇಟಿ ಪರೀಕ್ಷೆ ವೇಳೆ ಜನಿವಾರ ಗದ್ದಲ ಉಂಟಾಗಿತ್ತು. ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಜನಿವಾರ ತೆಗೆದು ಪರೀಕ್ಷಾ ಕೇಂದ್ರದೊಳಗೆ ಹೋಗುವಂತೆ ಕಾಲೇಜು ಸಿಬ್ಬಂದಿ ಸೂಚಿಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಬೀದರ್‌ನಲ್ಲಿ ವಿದ್ಯಾರ್ಥಿಯೊಬ್ಬ ಜನಿವಾರ ತೆಗೆಯಲೊಪ್ಪದೆ ಸಿಇಟಿ ಗಣಿತ ಪರೀಕ್ಷೆಯಿಂದಲೇ ಹೊರಗುಳಿದು ಭಾರೀ ಚರ್ಚೆಗೆ ಕಾರಣವಾಗಿತ್ತು.
ಇದು ವಿಕೃತ ಮನಸ್ಥಿತಿ: ಸಚಿವ ಸುಧಾಕರ್ ಗರಂ
ಸಿಇಟಿ ಬರೆಯಲು ಬಂದಿದ್ದ ವಿದ್ಯಾರ್ಥಿಯ ಜನಿವಾರ ತೆಗೆಸಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ವಿಕೃತ ಮನಸ್ಥಿತಿಯವರು ಮಾತ್ರ ಹೀಗೆ ಮಾಡಲು ಸಾಧ್ಯ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ಕಳೆದ ಬಾರಿ ಬೀದರ್, ಶಿವಮೊಗ್ಗದಲ್ಲಿ ಈ ರೀತಿಯ ಘಟನೆಗಳಾಗಿದ್ದವು. ಇದರ ಹಿಂದೆ ಯಾರಾದರೂ ಇದ್ದು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸಿದ್ದರೂ ಆಶ್ಚರ್ಯವಿಲ್ಲ. ಈ ರೀತಿ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಸಿಬ್ಬಂದಿಯನ್ನು ತಕ್ಷಣ ಬಂಧಿಸಿ
ವಿದ್ಯಾರ್ಥಿ ಜನಿವಾರ ತೆಗೆಸಿದವರನ್ನು ತಕ್ಷಣ ಬಂಧಿಸಿ ಜೈಲಿಗೆ ಕಳುಹಿಸಬೇಕು.ಎಫ್‌ಐಆರ್ ಹಾಕಲು ಹಿಂದೇಟು ಹಾಕಿದ ಇನ್ಸ್‌ಪೆಕ್ಟರ್ ಮೇಲೆ ಕ್ರಮ ಆಗಬೇಕು. ಇಂತಹ ಘಟನೆಗಳೂ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು.
ಆರ್. ಅಶೋಕ್, ಪ್ರತಿಪಕ್ಷ ನಾಯಕ


