ಬಿಹಾರ ಚುನಾವಣೆಯಲ್ಲಿ ಬಿಜೆಪಿ ಹಣ ಕೊಟ್ಟು ಮತ ಖರೀದಿಸಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿದ್ದು, 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕೋಲಾರ, (ನ.15): ಕಾಂಗ್ರೆಸ್ ಪಕ್ಷಕ್ಕೆ ಅದರದ್ದೇ ಆದ ಸಿದ್ಧಾಂತ, ಶಕ್ತಿ ಇದೆ. ನಾವು ಪ್ರಣಾಳಿಕೆಯಲ್ಲಿ ಗ್ಯಾರಂಟಿಗಳನ್ನು ಘೋಷಿಸಿದ್ದೆವು. ಅಧಿಕಾರಕ್ಕೆ ಬಂದ ತಕ್ಷಣವೇ ಯೋಜನೆಗಳನ್ನು ಜಾರಿಗೆ ತಂದೆವು ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.
ಬಿಹಾರ ಚುನಾವಣೆ ಸೋಲು, ಕೆಎನ್ ರಾಜಣ್ಣ ಹೇಳಿಕೆ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೆಎನ್ ರಾಜಣ್ಣ ಅವರದ್ದು ವೈಯಕ್ತಿಕ ಅಭಿಪ್ರಾಯ, ಅದರ ಬಗ್ಗೆ ನಾನು ಏನೂ ಹೇಳೋಲ್ಲ. ಬಿಹಾರ ಚುನಾವಣೆಯಲ್ಲಿ ಬಿಜೆಪಿ ಕಾನೂನು ಬಾಹಿರವಾಗಿ ಜನರಿಗೆ ಚುನಾವಣೆಗೆ ಮೊದಲು 10 ಸಾವಿರ ರೂಪಾಯಿ ಕೊಟ್ಟಿದ್ದಾರೆ. ನಾವು ಪ್ರಣಾಳಿಕೆಗಳನ್ನ ಘೋಷಿಸಿದ್ದೆವು. ಆದರೆ ಅವರು ನೇರವಾಗಿ ಹಣ ಕೊಟ್ಟು ಮತಗಳನ್ನು ಖರೀದಿಸಿದ್ದಾರೆ ಎಂದು ಆರೋಪಿಸಿದರು.
ಬಿಹಾರದಲ್ಲಿ ವೋಟ್ ಚೋರಿ ಆಗಿದೆ:
ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ. ಆಳಂದದಂತೆ ಬಿಹಾರದಲ್ಲೂ ವೋಟ್ ಚೋರಿ ಆಗಿದೆ. ದಾರಿ ತಪ್ಪಿಸಿ ಗೆಲುವು ಸಾಧಿಸಿದ್ದಾರೆ. ಆದರೆ ಈ ಗೆಲುವು ಕರ್ನಾಟಕದ ಮೇಲೆ ಯಾವ ಪರಿಣಾಮವೂ ಬೀರುವುದಿಲ್ಲ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಡಳಿತ ಉತ್ತಮವಾಗಿ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳಲಲ್ಲಿ ನುಡಿದಂತೆ ನಡೆದಿದ್ದೇವೆ. ಗ್ಯಾರಂಟಿ ಯೋಜನೆ ಜಾರಿಗೆ ತಂದ ಮೇಲೆ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಯೋಜನೆಗಳು ಬಂದ ಮೇಲೆ ರಾಜ್ಯದ ಜನರು ನೆಮ್ಮದಿಯಾಗಿದ್ದಾರೆ ಎಂದರು.
2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರ:
ಬಿಹಾರ ಚುನಾವಣೆಯಲ್ಲಿ ಎನ್ಡಿಎ ಗೆಲುವು ಪಡೆದ ಪರಿಣಾಮ ಮುಂದೆ ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂಬ ಮಾತನ್ನ ನಿರಾಕರಿಸಿದ ಸಚಿವರು, 2028ಕ್ಕೆ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು. ಇದೇ ವೇಳೆ ಸಚಿವರ ಬದಲಾವಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಚಿವರ ಬದಲಾವಣೆ ಸೇರಿ ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸದ್ಯಕ್ಕೆ ಯಾವುದೇ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ ಎಂದರು.


