ಬಂಗಾಳಕೊಲ್ಲಿಯ 'ಮೋಂಥಾ' ಚಂಡಮಾರುತ ಮತ್ತು ಅರಬ್ಬೀ ಸಮುದ್ರದ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ. ಹವಾಮಾನ ಇಲಾಖೆಯು ವಿಶೇಷವಾಗಿ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ನೀಡಿದ್ದು, ಅ.29ರ ನಂತರ ಮಳೆ ಇಳಿಮುಖವಾಗಲಿದೆ.
ಬೆಂಗಳೂರು (ಅ.27): ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾಗಿರುವ ಎರಡು ಪ್ರಬಲ ಹವಾಮಾನ ವ್ಯವಸ್ಥೆಗಳಾದ 'ಮೋಂಥಾ' (Montha) ಚಂಡಮಾರುತ ಮತ್ತು ವಾಯುಭಾರ ಕುಸಿತದ ಕಾರಣದಿಂದಾಗಿ ಕರ್ನಾಟಕ ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (ಬೆಂಗಳೂರು) ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ 'ಮೋಂಥಾ' ಭೀತಿ
ನೈಋತ್ಯ ಮತ್ತು ಪಕ್ಕದ ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿ ನೆಲೆಗೊಂಡಿರುವ ಚಂಡಮಾರುತ 'ಮೋಂಥಾ'ವು ಉತ್ತರ-ವಾಯುವ್ಯದ ಕಡೆಗೆ ಗಂಟೆಗೆ 18 ಕಿ.ಮೀ. ವೇಗದಲ್ಲಿ ಚಲಿಸುತ್ತಿದೆ. ಅ.28ರ ಬೆಳಗ್ಗೆ ಇದು ತೀವ್ರ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿದೆ. ಇದು ಅ.28ರ ಸಂಜೆ/ರಾತ್ರಿ ವೇಳೆಗೆ ಆಂಧ್ರಪ್ರದೇಶದ ಮಚಿಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕಾಕಿನಾಡ ಬಳಿ ಗಂಟೆಗೆ 90-110 ಕಿ.ಮೀ. ವೇಗದ ಗಾಳಿಯೊಂದಿಗೆ ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ, ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇದೇ ವೇಳೆ, ಅರಬ್ಬೀ ಸಮುದ್ರದ ಪೂರ್ವ-ಮಧ್ಯ ಭಾಗದಲ್ಲಿ ವಾಯುಭಾರ ಕುಸಿತ (Depression) ಸಹ ಮುಂದುವರಿದು ಉತ್ತರ-ಈಶಾನ್ಯ ದಿಕ್ಕಿನಲ್ಲಿ ಸಾಗುತ್ತಿರುವುದು ರಾಜ್ಯದ ಕರಾವಳಿ ಮತ್ತು ಪಶ್ಚಿಮ ಘಟ್ಟದ ಜಿಲ್ಲೆಗಳ ಮೇಲೆ ಮಳೆಯ ಪರಿಣಾಮ ಬೀರಲಿದೆ.
ಕರ್ನಾಟಕಕ್ಕೆ ಮುಂದಿನ 48 ಗಂಟೆಗಳ ಮಳೆ ಮುನ್ಸೂಚನೆ
ದಿನ 1 (ಅ.27, ಸೋಮವಾರ):
ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಯಿಂದ ಅತಿ ಭಾರೀ ಮಳೆ ಮತ್ತು ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಸಾಧ್ಯತೆ.
ಉತ್ತರ ಒಳನಾಡು: ಬಾಗಲಕೋಟೆ, ಕೊಪ್ಪಳ, ರಾಯಚೂರು, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆ ನಿರೀಕ್ಷಿಸಲಾಗಿದೆ.
ದಕ್ಷಿಣ ಒಳನಾಡು: ಕೋಲಾರ, ಚಿಕ್ಕಬಳ್ಳಾಪುರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆ ಬರಲಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಿನ 2 (ಅ.28, ಮಂಗಳವಾರ):
ಕರಾವಳಿ ಕರ್ನಾಟಕ: ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆ ಮುಂದುವರೆಯಲಿದೆ.
ಉತ್ತರ ಒಳನಾಡು: ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆ ಆಗಲಿದೆ.
ಬೆಂಗಳೂರು ನಗರದ ಹವಾಮಾನ:
ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಲಘು ಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 25°C ರಿಂದ 20°C ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ.
ನಂತರದ ದಿನಗಳಲ್ಲಿ ಮಳೆ ಇಳಿಮುಖ:
ಅ.29ರ ನಂತರ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗಲಿದೆ. ಅ.29 ಮತ್ತು 30ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಲಘು ಮಳೆ ಇದ್ದು, ಅ.31 ರಿಂದ ನ.2ರ ವರೆಗೆ ಬಹುತೇಕ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ (Dry Weather) ಮುಂದುವರೆಯುವ ಸಾಧ್ಯತೆಯಿದೆ.


