ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗಾಗಿ ಡಿ.20 ರಿಂದ 22ರವರೆಗೆ ಲಿಖಿತ ಪರೀಕ್ಷೆ ನಡೆಸಲಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಸಿಸಿ ಕ್ಯಾಮೆರಾ, ನೆಟ್‌ವರ್ಕ್ ಜಾಮರ್, ಮತ್ತು ಮುಖಚಹರೆ ಪತ್ತೆ ತಂತ್ರಜ್ಞಾನ ಬಳಕೆ.

ಬೆಂಗಳೂರು(ಡಿ.20): ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಡಿ.20ರಿಂದ 22ರವರೆಗೆ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಬಿಗಿ ಕ್ರಮಗಳನ್ನು ಕೈಗೊಂಡಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. 

ಒಟ್ಟು 24,800 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪಾರದರ್ಶಕವಾಗಿ ಹಾಗೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ನೆಟ್‌ವರ್ಕ್ ಜಾಮರ್ ಅಳವಡಿಸಲಾಗಿದ್ದು, ವಿದ್ಯುನ್ಮಾನ ವಸ್ತುಗಳಿಗೆ ನಿರ್ಬಂಧವಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ ಸಂಹಿತೆ ಇದ್ದು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಾಧಿಕಾರ ಸೂಚಿಸಿದೆ.

ಡಿ.20ರಂದು ಬೆಂಗಳೂರಿನ 7 ಕೇಂದ್ರಗಳಲ್ಲಿ 3,486 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಾರೆ. ಬೆಂಗಳೂರು, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳ 51 ಕೇಂದ್ರಗಳಲ್ಲಿ ಡಿ.21ರಂದು 21,198 ಅಭ್ಯರ್ಥಿಗಳು ಹಾಗೂ ಡಿ.22ರಂದು ಬೆಂಗಳೂರಿನಲ್ಲಿ 1,166 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಾರೆ.

ಕಲ್ಯಾಣ ಕರ್ನಾಟಕ ಸೇರಿದಂತೆ ಇತರ ಎಲ್ಲರಿಗೂ ಡಿ.28ರಂದು ಕನ್ನಡ ಕಡ್ಡಾಯ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.