ತುಮಕೂರಿನ ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿರುವ ಡಾ.ಶಿವಕುಮಾರ ಮಹಾಸ್ವಾಮಿಗಳ 119ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.  ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಅವರು ಬರಮಾಡಿಕೊಂಡರು.

ಬೆಂಗಳೂರು (ಏ.1): ತುಮಕೂರಿನ ಸಿದ್ದಗಂಗಾ ಮಠದಲ್ಲಿ ಏ.1ರಂದು ಆಯೋಜಿಸಲಾಗಿರುವ ಡಾ.ಶಿವಕುಮಾರ ಮಹಾಸ್ವಾಮಿಗಳ 119ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಸಂಜೆ ಬೆಂಗಳೂರಿಗೆ ಆಗಮಿಸಿದರು. ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

- ಇಂದು ತುಮಕೂರಲ್ಲಿ ನಡೆಯಲಿದೆ ಕಾರ್‍ಯಕ್ರಮ

ಈ ವೇಳೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಪೊಲೀಸ್ ‌ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಸೇರಿ ಹಿರಿಯ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು. ಬಳಿಕ ರಾಷ್ಟ್ರಪತಿಗಳು ಲೋಕ ಭವನಕ್ಕೆ ತೆರಳಿ ವಾಸ್ತವ್ಯ ಹೂಡಿದರು. ಬುಧವಾರ ಸಿದ್ಧಗಂಗಾ ಮಠದಲ್ಲಿ ಕಾರ್ಯಕ್ರಮ ನಡೆಯಲಿದೆ.

ಬೆಳಗ್ಗೆ 10.30ಕ್ಕೆ ನಡೆಯಲಿರುವ ಲಿಂಗೈಕ್ಯ ಡಾ.ಶಿವಕುಮಾರ್ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಹಾಗೂ ಗುರುವಂದನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ. ಮಠದ ಆವರಣದಲ್ಲಿ ಇರುವ ಗೋಸಲ ಸಿದ್ದೇಶ್ವರ ವೇದಿಕೆ ಸಿದ್ಧತೆ ನಡೆಯುತ್ತಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿ.ಸೋಮಣ್ಣ, ಗೃಹ ಸಚಿವ ಜಿ.ಪರಮೇಶ್ವರ್, ಸಿದ್ದಲಿಂಗಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿದೇಶಿ ಕೇಂದ್ರ ಸ್ವಾಮೀಜಿ, ಕಿರಿಯ ಸ್ವಾಮೀಜಿ ಶಿವಸಿದ್ದೇಶ್ವರ ಸ್ವಾಮೀಜಿ, ಭಾಗಿಯಾಗಲಿದ್ದಾರೆ.

ಬೆಂಗಳೂರಿನಿಂದ ಹೆಲಿಕಾಪ್ಟರ್‌ ಮೂಲಕ ತುಮಕೂರಿಗೆ

ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಶಿವಕುಮಾರ ಸ್ಚಾಮೀಜಿಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ರಾಷ್ಟ್ರಪತಿ ಆಗಮನ ಹಿನ್ನೆಲೆ ಪೊಲೀಸ್ ಬಿಗಿಭದ್ರತೆ

ಕೇಂದ್ರ ವಲಯ ಐಜಿಪಿ ಲಾಬೂರಾಮ್ ನೇತೃತ್ವದಲ್ಲಿ ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ಎಸ್ ಪಿ - 2, ಎಎಸ್ ಪಿ - 3, ಡಿವೈಎಸ್ ಪಿ - 8, ಪೊಲೀಸ್ ಇನ್ ಸ್ಪೆಕ್ಟರ್ - 29, ಪಿಎಸ್ಐ - 79, ಎಎಸ್ ಐ - 114, ಹೆಡ್ ಕಾನ್ಸಸ್ಟೇಬಲ್ ಹಾಗೂ ಪೊಲೀಸ್ ಕಾನ್ ಸ್ಟೇಬಲ್ - 1181, ಮಹಿಳಾ ಪೊಲೀಸ್ - 81, ಡಿಆರ್ ತುಕಡಿ - 4 ಸೇರಿ ಒಟ್ಟು 1600 ಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜಿಸಲಾಗಿದೆ.