ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ್ ಕುಲಕರ್ಣಿ, ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ತಮ್ಮ ಶಾಸಕ ಸ್ಥಾನವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ, ಅವರು ಶಿಕ್ಷೆಗೆ ತಡೆಯಾಜ್ಞೆ ಕೋರಿದ್ದು, ಈ ಕಾನೂನು ಹೋರಾಟದ ಮುಂದಿನ ಹಂತವು ತೀವ್ರ ಕುತೂಹಲ ಕೆರಳಿಸಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಶಾಸಕ ವಿನಯ್ ಕುಲಕರ್ಣಿ ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಸೆಷನ್ಸ್ ಕೋರ್ಟ್ ವಿಧಿಸಿದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ, ಅದರ ಜಾರಿಗೆ ತಾತ್ಕಾಲಿಕ ತಡೆ ನೀಡುವಂತೆ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸೆಷನ್ಸ್ ಕೋರ್ಟ್ ಕೊಟ್ಟಿರೋ ಜೀವಾವಧಿ ಶಿಕ್ಷೆಯ ಅಮಾನತು ಹಾಗೂ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಿರುವ ಈ ಅರ್ಜಿ, ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಚಂದ್ರಶೇಖರ್ ಇಂಡಿ ಕೂಡ ಮೇಲ್ಮನವಿ

ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಮಾತ್ರವಲ್ಲದೆ, ಸಹ ಆರೋಪಿಯಾಗಿರುವ ಚಂದ್ರಶೇಖರ್ ಇಂಡಿ ಕೂಡ ತಮ್ಮ ಮೇಲ್ಮನವಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. ಸೆಷನ್ಸ್ ಕೋರ್ಟ್ ತೀರ್ಪಿನ ಬಳಿಕ ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ವಿನಯ್ ಕುಲಕರ್ಣಿ, ಇದೀಗ ಕಾನೂನು ಹೋರಾಟದ ಮೂಲಕ ನ್ಯಾಯಾಲಯದಿಂದ ಪರಿಹಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ ಪಡೆಯುವ ಮೂಲಕ ತಮ್ಮ ಶಾಸಕ ಸ್ಥಾನವನ್ನು ಉಳಿಸಿಕೊಳ್ಳಲು ವಿನಯ್ ಕುಲಕರ್ಣಿ ಯತ್ನಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೈಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆ ಈ ಪ್ರಕರಣದ ಮುಂದಿನ ದಿಕ್ಕನ್ನು ನಿರ್ಧರಿಸಲಿದೆ ಎಂಬುದರಿಂದ, ನ್ಯಾಯಾಂಗದ ತೀರ್ಪಿನತ್ತ ಎಲ್ಲರ ಕಣ್ಣು ನೆಟ್ಟಿದೆ.

ಮುಂದಿರುವ ಆಯ್ಕೆಗಳು

ಇನ್ನು ಜೈಲು ಪಾಲಾಗಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ಜೈಲಿನ ಅಧಿಕಾರಿಗಳು 16110 ಸಜಾ ಕೈದಿ ಸಂಖ್ಯೆ ನೀಡಿದ್ದಾರೆ. ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಏಪ್ರಿಲ್ 17ರಂದು ಸೆಷನ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅಲ್ಲದೆ ಒಬ್ಬ ಅಪರಾಧಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಒಂದು ವೇಳೆ ಸೆಷನ್ ಕೋರ್ಟ್ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡದರೆ. ಈ ಆದೇಶವನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಲು ಕಾನೂನಿನಲ್ಲಿ ಅವಕಾಶವಿದೆ.